ಸೌಜನ್ಯ ಕೊಲೆ ಪ್ರಕರಣ: ಮರು ತನಿಖೆ ಕೋರಿದ್ದ ಅರ್ಜಿ ವಜಾ- ಪರ್ಯಾದ ದಾರಿ ತೋರಿಸಿದ ಕರ್ನಾಟಕ ಹೈಕೋರ್ಟ್
ಸೌಜನ್ಯ ಕೊಲೆ ಪ್ರಕರಣ: ಮರು ತನಿಖೆ ಕೋರಿದ್ದ ಅರ್ಜಿ ವಜಾ- ಪರ್ಯಾದ ದಾರಿ ತೋರಿಸಿದ ಕರ್ನಾಟಕ ಹೈಕೋರ್ಟ್
ರಾಜ್ಯಾದ್ಯಂತ ಭಾರೀ ಸುದ್ದಿ ಮಾಡುತ್ತಿರುವ 2012ರಲ್ಲಿ ದಕ್ಷಿಣ ಕನ್ನಡದ ಧರ್ಮಸ್ಥಳ ಗ್ರಾಮದಲ್ಲಿ ನಡೆದಿದ್ದ ವಿದ್ಯಾರ್ಥಿನಿ ಕುಮಾರಿ ಸೌಜನ್ಯ ಕೊಲೆ ಪ್ರಕರಣವನ್ನು ಮರು ತನಿಖೆ ಮಾಡಬೇಕು ಎಂದು ಕೋರಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ವಜಾಗೊಳಿಸಿದೆ.
ಮುಖ್ಯ ನ್ಯಾಯಮೂರ್ತಿ ಪಿ.ಬಿ. ವರಾಳೆ ಮತ್ತು ನ್ಯಾ. ಕೃಷ್ಣ ಎಸ್. ದೀಕ್ಷಿತ್ ಅವರಿದ್ದ ವಿಭಾಗೀಯ ನ್ಯಾಯಪೀಠ ಈ ಆದೇಶ ಹೊರಡಿಸಿದೆ.
ಬೆಂಗಳೂರು ಶೇಷಾದ್ರಿಪುರದ ಸಾಮಾಜಿಕ ಕಾರ್ಯಕರ್ತ ಗಿರೀಶ್ ಭಾರದ್ವಾಜ್, ಬೆಳ್ತಂಗಡಿಯ ಜಿ. ನವೀನ್ ಕುಮಾರ್ ಮತ್ತು ಬಲ್ನಾಡು ಪುತ್ತೂರಿನ ವಿನಾಯಕ ಫ್ರೆಂಡ್ಸ್ ಚಾರಿಟೆಬಲ್ ಟ್ರಸ್ಟ್ ಈ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸಲ್ಲಿಸಿತ್ತು.
ಈ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಪೀಠ, ಅರ್ಜಿಯನ್ನು ವಜಾಗೊಳಿಸಿ, ಕಾನೂನಿನ ಅಡಿಯಲ್ಲಿ ಲಭ್ಯವಿರುವ ಪರ್ಯಾಯ ವಿಧಾನಗಳ ಮೂಲಕ ಪರಿಹಾರ ಪಡೆಯಬಹುದು ಎಂದು ಪಕ್ಷಕಾರರಿಗೆ ಸೂಚಿಸಿದೆ.
ಅರ್ಜಿದಾರರ ಪರ ವಾದ ಮಂಡಿಸಿದ ಹಿರಿಯ ವಕೀಲ ಅರುಣ್ ಶ್ಯಾಮ್, ಈ ಪ್ರಕರಣದ ಆರೋಪಿ ವಿರುದ್ಧ ಸೂಕ್ತ ಸಾಕ್ಷ್ಯಾಧಾರಗಳು ಇಲ್ಲ ಎಂಬ ಕಾರಣಕ್ಕೆ ಆರೋಪಿಯನ್ನು ಖುಲಾಸೆಗೊಳಿಸಿದೆ. ನಿಜವಾದ ದೋಷಿ ಪ್ರಕರಣದಿಂದ ತಪ್ಪಿಸಿಕೊಂಡಿದ್ದಾರೆ. ಪ್ರಕರಣದ ಪ್ರಾಥಮಿಕ ತನಿಖೆ ವೇಳೆ ತನಿಖಾಧಿಕಾರಿ ಮತ್ತು ವೈದ್ಯರಿಂದ ಕೆಲವೊಂದು ಲೋಪಗಳು ನಡೆದಿವೆ. ಹಾಗಾಗಿ ಮರು ತನಿಖೆ ನಡೆಸಬೇಕು ಎಂಬ ಜನಾಭಿಪ್ರಾಯ ಕೇಳಿಬಂದಿದೆ. ಇದರಿಂದ ಸಿಬಿಐ ಇಲ್ಲವೇ ಸ್ವತಂತ್ರ ತನಿಖಾ ಸಂಸ್ಥೆ ಅಥವಾ ಎಸ್‌ಐಟಿಯಿಂದ ಹೊಸದಾಗಿ ಮರುತನಿಖೆ ನಡೆಸಬೇಕು. ಈ ಬಗ್ಗೆ ಸರ್ಕಾರಕ್ಕೆ ಆದೇಶ ನೀಡಬೇಕು ಎಂದು ಕೋರಿದರು.
ವಾದ ಆಲಿಸಿದ ನ್ಯಾಯಪೀಠ, ಮೂಲ ದೂರುದಾರರು ಅಥವಾ ಸಂತ್ರಸ್ತ ಕುಟುಂಬಕ್ಕೆ ವಿಚಾರಣಾ ನ್ಯಾಯಾಲಯದ ಆದೇಶ ಪ್ರಶ್ನಿಸಿ ಮೇಲ್ಮನವಿ ಸಲ್ಲಿಸುವ ಅವಕಾಶ ಕಾನೂನಿನಲ್ಲಿ ಇದೆ. ಮೇಲ್ಮನವಿಯಲ್ಲಿ ಸದ್ರಿ ಲಫಗಳನ್ನು ಪರಿಗಣಿಸಬಹುದಾಗಿದೆ ಎಂದು ಹೇಳಿತು.
ಮೇಲ್ಮನವಿ ಸಲ್ಲಿಸಲು ಸಂತ್ರಸ್ತ ಕುಟುಂಬಕ್ಕೆ ಸಹಾಯ ಮಾಡಿ. ಸಭೆ, ಸಮಾರಂಭ, ಧರಣಿ ಮತ್ತು ಸಾರ್ವಜನಿಕ ಭಾವನೆಗಳಿಂದ ಕಾನೂನು ಚೌಕಟ್ಟು ಮೀರಲು ಸಾಧ್ಯವಿಲ್ಲ. ಕಾನೂನಿನ ಮಿತಿ ಅರಿತು ವ್ಯವಹರಿಸಬೇಕಾಗುತ್ತದೆ. ಅದರಂತೆ ಅರ್ಜಿ ಹಿಂದೆ ಪಡೆದು ನಿಮ್ಮ ಮನವಿಗಳ ಕುರಿತು ಕಾನೂನಿನ ಅಡಿಯಲ್ಲಿ ಲಭ್ಯವಿರುವ ಪರ್ಯಾಯ ವಿಧಾನಗಳ ಮೂಲಕ ಪರಿಹಾರ ಪಡೆದುಕೊಳ್ಳಬಹುದು ಎಂದು ಸೂಚಿಸಿತು.
ಆದರೆ, ಅರ್ಜಿದಾರರು ಅರ್ಜಿ ಹಿಂಪಡೆಯಲು ನಿರಾಕರಿಸಿದ ಕಾರಣ, ನ್ಯಾಯಪೀಠ ಅರ್ಜಿಯನ್ನು ವಜಾಗೊಳಿಸುವ ಮೂಲಕ ವಿಲೇ ಮಾಡಿತು.