ವೈರಲ್ ವೀಡಿಯೋ: ವಿವಾದಿತ ಹೇಳಿಕೆಯಿಂದ ನ್ಯಾಯಮೂರ್ತಿಗೆ ಸಂಕಷ್ಟ?- ಸುಪ್ರೀಂ ಕೋರ್ಟ್‌ನಿಂದ ಸ್ವಯಂ ಪ್ರೇರಿತ ವಿಚಾರಣೆ
ವೈರಲ್ ವೀಡಿಯೋ: ವಿವಾದಿತ ಹೇಳಿಕೆಯಿಂದ ನ್ಯಾಯಮೂರ್ತಿಗೆ ಸಂಕಷ್ಟ?- ಸುಪ್ರೀಂ ಕೋರ್ಟ್‌ನಿಂದ ಸ್ವಯಂ ಪ್ರೇರಿತ ವಿಚಾರಣೆ
ಬೆಂಗಳೂರಿನ ಗೋರಿಪಾಳ್ಯದಲ್ಲಿ "ಪಾಕಿಸ್ಥಾನ" ಎಂಬ ಕರ್ನಾಟಕ ಹೈಕೋರ್ಟ್ ನ್ಯಾ. ವಿ. ಶ್ರೀಶಾನಂದ ಅವರ ಕಮೆಂಟ್ ಈಗ ದೇಶಾದ್ಯಂತ ಸುದ್ದಿ ಮಾಡಿದೆ. ಆಗಸ್ಟ್ 28ರಂದು ಕಲಾಪದಲ್ಲಿ ಆಡಿದ ಮಾತುಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಈ ವೀಡಿಯೋದಲ್ಲಿ ನ್ಯಾಯಮೂರ್ತಿಗಳು ಆಡಿದ್ದಾರೆ ಎನ್ನಲಾದ ಮಾತುಗಳಿಗೆ ಸಂಬಂಧಿಸಿದಂತೆ ಶುಕ್ರವಾರ ಸುಪ್ರೀಂ ಕೋರ್ಟ್ ಸ್ವಯಂ ಪ್ರೇರಿತ ಮೊಕದ್ದಮೆ ದಾಖಲಿಸಿಕೊಂಡಿದೆ.
ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್, ನ್ಯಾ. ಸಂಜೀವ್ ಖನ್ನಾ, ನ್ಯಾ. ಬಿ.ಆರ್. ಗವಾಯಿ, ನ್ಯಾ. ಸೂರ್ಯಕಾಂತ್ ಹಾಗೂ ನ್ಯಾ. ಹೃಷಿಕೇಶ್ ರಾಯ್ ಅವರಿದ್ದ ವಿಭಾಗೀಯ ನ್ಯಾಯಪೀಠ ಈ ಪ್ರಕರಣದ ವಿಚಾರಣೆ ನಡೆಸಲಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್ ರಿಜಿಸ್ಟ್ರಾರ್ ಜನರಲ್ ಅವರಿಂದ ವರದಿ ಕೇಳಿದೆ.
ಈ ವಿಚಾರದಲ್ಲಿ ಅಟಾರ್ನಿ ಜನರಲ್ ಆರ್. ವೆಂಕಟರಮಣಿ ಮತ್ತು ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರ ಸಹಾಯವನ್ನೂ ನ್ಯಾಯಪೀಠ ಬಯಸಿದೆ.
ನ್ಯಾಯಾಂಗ ವಿಚಾರಣೆಯ ಸಂದರ್ಭದಲ್ಲಿ ಕರ್ನಾಟಕ ಹೈಕೋರ್ಟ್ ನ್ಯಾಯಮೂರ್ತಿ ವಿ. ಶ್ರೀಶಾನಂದ ಅವರು ನೀಡಿದ ಕೆಲ ಹೇಳಿಕೆಗಳ ಬಗ್ಗೆ ನಮ್ಮ ಗಮನ ಸೆಳೆಯಲಾಗಿದೆ. ಈ ವಿಚಾರದಲ್ಲಿ ನ್ಯಾಯಾಲಯಕ್ಕೆ ಸಹಾಯ ಮಾಡಲು ಅಟಾರ್ನಿ ಜನರಲ್ ಮತ್ತು ಸಾಲಿಸಿಟರ್ ಜನರಲ್ ಅವರ ನೆರವನ್ನು ಕೇಳಿಕೊಳ್ಳುತ್ತಿದ್ದೇವೆ ಎಂದು ಸುಪ್ರೀಂ ಕೋರ್ಟ್ ನ್ಯಾಯಪೀಠ ಹೇಳಿದೆ.
ಕರ್ನಾಟಕ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಗಳಿಂದ ಆಡಳಿತಾತ್ಮಕ ನಿರ್ದೇಶನ ಪಡೆದು ಎರಡು ವಾರದಲ್ಲಿ ಕಾನೂನು ಪ್ರಕ್ರಿಯೆ ಆರಂಭಿಸಬಹುದು ಮತ್ತು ಇಂತಹ ಘಟನೆಗಳು ಮರುಕಳಿಸದಿರುವ ನಿಟ್ಟಿನಲ್ಲಿ ಕೆಲವು ಮೂಲಭೂತ ಮಾರ್ಗಸೂಚಿಗಳನ್ನು ಸುಪ್ರೀಂ ಕೋರ್ಟ್ ರೂಪಿಸುವ ಸಾಧ್ಯತೆ ಇದೆ ಎನ್ನಲಾಗಿದೆ.
ನ್ಯಾ. ವಿ. ಶ್ರೀಶಾನಂದ ಅವರ ಎರಡು ವೀಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದವು. ಒಂದು ವೀಡಿಯೋ ಬೆಂಗಳೂರಿನ ಮುಸ್ಲಿಂ ಜನಸಂಖ್ಯೆ ಹೆಚ್ಚಾಗಿರುವ ಪ್ರದೇಶವನ್ನು 'ಪಾಕಿಸ್ತಾನ' ಎಂದು ಕರೆದಿದ್ದರು.
ಬೆಂಗಳೂರಿನ ಮೈಸೂರು ರಸ್ತೆಯ ಮೇಲ್‌ಸೇತುವೆಗೆ ಹೋಗಿ ಅಲ್ಲಿ ಸಂಚರಿಸುವ ಪ್ರತಿಯೊಂದು ಆಟೋ ರಿಕ್ಷಾದಲ್ಲೂ 10 ಜನರನ್ನು ತುಂಬಿಕೊಳ್ಳಲಾಗುತ್ತದೆ. ಮೈಸೂರು ರಸ್ತೆಯ ಮೇಲ್‌ಸೇತುವೆ ಸಾಗುವ ಗೋರಿಪಾಳ್ಯದಿಂದ ಮಾರುಕಟ್ಟೆವರೆಗಿನ ಪ್ರದೇಶ ಭಾರತದಲ್ಲಿ ಇಲ್ಲ. ಅದು ಪಾಕಿಸ್ತಾನದಲ್ಲಿದೆ. ಇದು ವಾಸ್ತವ. ಇದು ವಾಸ್ತವ... ಎಂಥಹುದೇ ಕಟ್ಟುನಿಟ್ಟಿನ ದಕ್ಷ ಪೊಲೀಸ್ ಅಧಿಕಾರಿಯನ್ನು ಅಲ್ಲಿಗೆ ಕರ್ತವ್ಯಕ್ಕೆ ನಿಯೋಜನೆ ಮಾಡಿದರೂ ಅವರನ್ನು ಹಿಡಿದುಬಿಡಲಿ.. ನೋಡುತ್ತೇನೆ ಎಂದಿದ್ದರು.
ಇನ್ನೊಂದು ವೀಡಿಯೋದಲ್ಲಿ ಪ್ರತಿವಾದಿ ವಕೀಲರೊಬ್ಬರಿಗೆ ಪ್ರಶ್ನೆ ಕೇಳುತ್ತಿದ್ದಾಗ ಮಧ್ಯಪ್ರವೇಶಿಸಿದ ವಕೀಲರೊಬ್ಬರನ್ನು ನ್ಯಾಯಮೂರ್ತಿಗಳು ತರಾಟೆಗೆ ತೆಗೆದುಕೊಂಡಿದ್ದರು. ಅವರ ಕುರಿತಾಗಿ ಅವರನ್ನು ಉದ್ದೇಶಿಸಿ ತಮಾಷೆ ಮಾಡಿದ್ದರು.