
ಕಿರಿಯ ಆರೋಗ್ಯ ಸಹಾಯಕಿಯರ ತರಬೇತಿ ಕೇಂದ್ರದ ಸಿಬ್ಬಂದಿ ಬಿಡುಗಡೆ ಆದೇಶಕ್ಕೆ ಕರ್ನಾಟಕ ಹೈಕೋರ್ಟ್ ತಡೆಯಾಜ್ಞೆ
ಕಿರಿಯ ಆರೋಗ್ಯ ಸಹಾಯಕಿಯರ ತರಬೇತಿ ಕೇಂದ್ರದ ಸಿಬ್ಬಂದಿ ಬಿಡುಗಡೆ ಆದೇಶಕ್ಕೆ ಕರ್ನಾಟಕ ಹೈಕೋರ್ಟ್ ತಡೆಯಾಜ್ಞೆ
ರಾಜ್ಯ ಕಿರಿಯ ಆರೋಗ್ಯ ಸಹಾಯಕಿಯರ ತರಬೇತಿ ಕೇಂದ್ರಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಪ್ರಾಂಶುಪಾಲರು ಹಾಗೂ ಬೋಧಕ ಸಿಬ್ಬಂದಿಯನ್ನು ತಕ್ಷಣದಿಂದಲೇ ಜಾರಿಗೆ ಬರುವಂತೆ ಕರ್ತವ್ಯದಿಂದ ಬಿಡುಗಡೆಗೊಳಿಸಲು ಸರ್ಕಾರ ಹೊರಡಿಸಿದ್ದ ಆದೇಶಕ್ಕೆ ಕರ್ನಾಟಕ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿದೆ.
ಚಿತ್ರದುರ್ಗ ತಾಲೂಕು ದಂಡಿನ ಕುರುಬರ ಹಟ್ಟಿಯ ಎಸ್.ಪಿ. ಮೇಘನ ಮತ್ತಿತರರು ಸಲ್ಲಿಸಿರುವ ಅರ್ಜಿಯನ್ನು ವಿಚಾರಣೆ ನಡೆಸಿದ ಕರ್ನಾಟಕ ಹೈಕೋರ್ಟ್‌ನ ನ್ಯಾಯಮೂರ್ತಿ ಇ.ಎಸ್. ಇಂದಿರೇಶ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಈ ತಡೆಯಾಜ್ಞೆ ನೀಡಿದೆ.
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಮತ್ತು ನಿರ್ದೇಶಕರು ಸೇರಿದಂತೆ ಎಲ್ಲ ಪ್ರತಿವಾದಿಗಳಿಗೆ ನೋಟೀಸ್ ಜಾರಿಗೊಳಿಸಲು ಆದೇಶ ಮಾಡಿದ್ದು, ಹೈಕೋರ್ಟ್ ಮುಂದೆ ತಮ್ಮ ಆಕ್ಷೇಪಣೆ ಸಲ್ಲಿಸಲು ನಿರ್ದೇಶನ ನೀಡಿದೆ.
ಎಎನ್‌ಎಂ ತರಬೇತಿ ಕೇಂದ್ರಗಳನ್ನು 2025-26ನೇ ಸಾಲಿನಿಂದಲೇ ಮುಚ್ಚಲು ನಿರ್ಧರಿಸಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹೊರಡಿಸಿದ್ದ ಆದೇಶಕ್ಕೂ ನ್ಯಾಯಪೀಠ ಮಧ್ಯಂತರ ತಡೆ ನೀಡಿತ್ತು.
ರಾಜ್ಯ ಸರ್ಕಾರ 2025ರ ಜೂನ್ 12ರಂದು ಹೊರಡಿಸಿರುವ ಆದೇಶ ಕಾನೂನು ಬಾಹಿರ ಮತ್ತು ಏಕಪಕ್ಷೀಯವಾಗಿದೆ ಎಂದು ಅರ್ಜಿದಾರರ ಪರ ವಕೀಲರು ವಾದಿಸಿದರು. ಪ್ರಸ್ತುತ, 417 ವಿದ್ಯಾರ್ಥಿಗಳು ಕೋರ್ಸ್‌ಗೆ ದಾಖಲಾಗಿದ್ದಾರೆ.
ಅವರಲ್ಲಿ 117 ವಿದ್ಯಾರ್ಥಿಗಳು ತಮ್ಮ ಕೋರ್ಸ್‌ನಲ್ಲಿ ಮುಂದುವರಿಯಲು ಇಷ್ಟವಿರಲಿಲ್ಲ ಎಂದು ತಿಳಿಸಿದ್ದಾರೆ. ಉಳಿದ, 115 ವಿದ್ಯಾರ್ಥಿಗಳು ಅದೇ ಕೋರ್ಸ್‌ನಲ್ಲಿ ಮುಂದುವರಿಯಲು ಇಚ್ಚಿಸಿದ್ದಾರೆ ಎಂದು ನ್ಯಾಯಪೀಠಕ್ಕೆ ವಿವರಿಸಿದ್ಧಾರೆ.