
NI ACT Sec 138: ಚೆಕ್ ಅಮಾನ್ಯ ಪ್ರಕರಣ: ಆರೋಪಿಯ ಅನುಪಸ್ಥಿತಿಯಲ್ಲಿ ಕ್ರಿಮಿನಲ್ ವಿಚಾರಣೆ ನಡೆಸಲಾಗದು- ಕರ್ನಾಟಕ ಹೈಕೋರ್ಟ್ ಮಹತ್ವದ ತೀರ್ಪು
ಚೆಕ್ ಅಮಾನ್ಯ ಪ್ರಕರಣ: ಆರೋಪಿಯ ಅನುಪಸ್ಥಿತಿಯಲ್ಲಿ ಕ್ರಿಮಿನಲ್ ವಿಚಾರಣೆ ನಡೆಸಲಾಗದು- ಕರ್ನಾಟಕ ಹೈಕೋರ್ಟ್ ಮಹತ್ವದ ತೀರ್ಪು
ಚೆಕ್ ಅಮಾನ್ಯ ಪ್ರಕರಣಗಳಲ್ಲಿ ಆರೋಪಿ ಗೈರು ಹಾಜರಿದ್ದಾಗ ಪ್ರಕರಣವನ್ನು ಏಕಪಕ್ಷೀಯ(ಎಕ್ಸ್‌ಪಾರ್ಟೆ) ಎಂದು ಘೋಷಿಸಿ ವಿಚಾರಣೆ ಮುಂದುವರೆಸಲು ಮತ್ತು ಶಿಕ್ಷೆ ವಿಧಿಸಲು ಸಾಧ್ಯವಿಲ್ಲ ಎಂದು ಕರ್ನಾಟಕ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ.
ಶಿವಮೊಗ್ಗದ ಅಬ್ದುಲ್ ಎಂಬುವರು ಸಲ್ಲಿಸಿದ್ದ ಕ್ರಿಮಿನಲ್ ಪರಿಶೀಲನಾ ಅರ್ಜಿಗಳನ್ನು ವಿಚಾರಣೆ ನಡೆಸಿದ ಕರ್ನಾಟಕ ಹೈಕೋರ್ಟ್‌ನ ನ್ಯಾಯಮೂರ್ತಿಗಳಾದ ಶ್ರೀನಿವಾಸ್ ಹರೀಶ್ ಕುಮಾರ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಈ ಮಹತ್ವದ ತೀರ್ಪು ನೀಡಿದೆ.
ವಿಚಾರಣಾ ನ್ಯಾಯಾಲಯವು ಆರೋಪಿಗೆ ಸಮನ್ಸ್ ಜಾರಿಗೊಳಿಸಿದ ಬಳಿಕವೂ ಆತ ಗೈರುಹಾಜರಾದರೆ ಆರೋಪಿಯನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಲು ಸಾಧ್ಯವಿರುವ ಇನ್ನಿತರೆ ಕ್ರಮಗಳನ್ನು ಕೈಗೊಳ್ಳಬೇಕು. ಅದರ ಬದಲಿಗೆ ಪ್ರಕರಣವನ್ನು ಏಕಪಕ್ಷೀಯ ಎಂದು ಘೋಷಿಸಿ ಕಾನೂನು ಪ್ರಕ್ರಿಯೆಗಳನ್ನು ಮುಂದುವರೆಸಬಾರದು ಎಂದು ನ್ಯಾಯಪೀಠ ತೀರ್ಪಿನಲ್ಲಿ ಹೇಳಿದೆ.
ಚೆಕ್ ಅಮಾನ್ಯ ಪ್ರಕರಣದಲ್ಲಿ ವಿಚಾರಣಾ ನ್ಯಾಯಾಲಯವಾದ ಉಡುಪಿಯ ಜೆ.ಎಂ.ಎಫ್.ಸಿ ನ್ಯಾಯಾಲಯ ತಮಗೆ ವಿಧಿಸಿರುವ ಶಿಕ್ಷೆ ಹಾಗೂ ಆ ತೀರ್ಪನ್ನು ಎತ್ತಿ ಹಿಡಿದಿರುವ ಉಡುಪಿ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ಆದೇಶ ರದ್ದು ಕೋರಿ ಆರೋಪಿ ಕರ್ನಾಟಕ ಹೈಕೋರ್ಟ್‌ಗೆ ಪರಿಶೀಲನಾ ಅರ್ಜಿಯನ್ನು ಸಲ್ಲಿಸಿದ್ದರು.
ಜೆಎಂಎಫ್‌ಸಿ ನ್ಯಾಯಾಲಯವು ಕಾನೂನು ಪ್ರಕ್ರಿಯೆಗಳನ್ನು ಪಾಲಿಸದೇ ಅರ್ಜಿದಾರರಿಗೆ ಶಿಕ್ಷೆ ವಿಧಿಸಿದೆ. ಈ ಆದೇಶವನ್ನು ಸೆಷನ್ಸ್ ಕೋರ್ಟ್ ಕೂಡ ಸರಿಯಾಗಿ ಪರಿಶೀಲಿಸದೇ ಪುರಸ್ಕರಿಸಿದೆ. ಪ್ರಕರಣದಲ್ಲಿ ಕಾನೂನು ಪ್ರಕ್ರಿಯೆಗಳನ್ನು ಕೈಬಿಡಲಾಗಿದೆ. ಸುಪ್ರೀಂ ಕೋರ್ಟ್ ತೀರ್ಪುಗಳನ್ನು ಕೂಡ ಅರ್ಥೈಸಿಕೊಳ್ಳುವಲ್ಲಿ ವಿಚಾರಣಾ ನ್ಯಾಯಾಲಯಗಳು ವಿಫಲವಾಗಿವೆ ಎಂದು ನ್ಯಾಯಪೀಠ ವಿಷಾದ ವ್ಯಕ್ತಪಡಿಸಿದೆ.
ಕ್ರಿಮಿನಲ್ ಪ್ರಕ್ರಿಯಾ ಸಂಹಿತೆಯ ಸೆಕ್ಷನ್ 299ರ ಸಂದರ್ಭಗಳ ಹೊರತಾಗಿ ಸೆಕ್ಷನ್ 273 ರ ಪ್ರಕಾರ ಆರೋಪಿ ಎದುರಲ್ಲೇ ವಿಚಾರಣಾ ಪ್ರಕ್ರಿಯೆ ನಡೆಯಬೇಕೆಂದು ಸ್ಪಷ್ಟವಾಗಿ ಹೇಳಲಾಗಿದೆ. ಆರೋಪಿಯ ಅಥವಾ ಆರೋಪಿ ಪರ ವಕೀಲರ ಗೈರು ಹಾಜರಿಯಲ್ಲಿ ಸಾಕ್ಷ್ಯಗಳನ್ನು ದಾಖಲಿಸಲು ಅವಕಾಶವಿಲ್ಲ ಎಂಬುದನ್ನು ನ್ಯಾಯಪೀಠ ಬೊಟ್ಟು ಮಾಡಿದೆ.
ಸದ್ರಿ ಈ ಪ್ರಕರಣದಲ್ಲಿ ಆರೋಪಿ ಗೈರುಹಾಜರಾಗಿದ್ದಾರೆ. ಅವರನ್ನು ನ್ಯಾಯಾಯದ ಮುಂದೆ ಹಾಜರುಪಡಿಸುವಂತಹ ಯಾವುದೇ ಕ್ರಮಗಳನ್ನು ವಿಚಾರಣಾ ನ್ಯಾಯಾಲಯ ಕೈಗೊಂಡಂತೆ ಕಾಣುವುದಿಲ್ಲ. ಮಾನ್ಯ ಸುಪ್ರೀಂ ಕೋರ್ಟ್ ತೀರ್ಪುಗಳನ್ನು ಕೂಡ ವಿಚಾರಣಾ ನ್ಯಾಯಾಲವು ಸರಿಯಾಗಿ ಅರ್ಥೈಸಿಕೊಂಡಿಲ್ಲ. ಕಾನೂನು ಪ್ರಕ್ರಿಯೆಗಳನ್ನು ಕೈಬಿಟ್ಟು ಅರ್ಜಿದಾರರಿಗೆ ಶಿಕ್ಷೆ ವಿಧಿಸಿ ಆದೇಶ ಹೊರಡಿಸಿರುವ ವಿಚಾರಣಾ ನ್ಯಾಯಾಯಗಳ ಕ್ರಮ ನಿಯಮಬಾಹಿರ ಎಂದು ತೀರ್ಪಿನಲ್ಲಿ ಹೇಳಿದೆ.
ಪ್ರಕರಣದ ಹಿನ್ನೆಲೆ
ಉಡುಪಿಯ ಮೊಹಮ್ಮದ್ ಇಕ್ಯಾಲ್ ಎಂಬುವರು ಶಿವಮೊಗ್ಗದ ಆಗುಂಬೆಯ ಅಬ್ದುಲ್ ಎಂಬುವರ ವಿರುದ್ಧ 6 ಚೆಕ್ ಬೌನ್ಸ್ ಕೇಸ್ ಗಳನ್ನು ದಾಖಲಿಸಿದ್ದರು.
ಈ ಪ್ರಕರಣಗಳ ವಿಚಾರಣೆ ನಡೆಸಿದ್ದ 3ನೇ ಹೆಚ್ಚುವರಿ ಸಿವಿಲ್ ಮತ್ತು ಜೆಎಂಎಫ್‌ಸಿ ನ್ಯಾಯಾಲಯವು ಆರೋಪಿಯ ಅನುಪಸ್ಥಿತಿಯಲ್ಲಿ ವಿಚಾರಣೆಯನ್ನು ಮುಗಿಸಿ ಶಿಕ್ಷೆ ವಿಧಿಸಿತ್ತು. ಈ ಆದೇಶವನ್ನು ಉಡುಪಿ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಪುರಸ್ಕರಿಸಿತ್ತು.
ಪ್ರಕರಣ: ಜಿ.ಎಸ್. ಅಬ್ದುಲ್ ಖಾದ್ರಿ ವಿರುದ್ಧ ಮೊಹಮ್ಮದ್ ಇಕ್ಬಾಲ್
ಕರ್ನಾಟಕ ಹೈಕೋರ್ಟ್ CRL.R.P. 1323/2019 Dated 24-05-2022